ಕನ್ನಡ ಧ್ವಜ ದಹನ, ಕನ್ನಡ ಸೇನೆ ಕಾರ್ಯಕರ್ತರು ಎಂಇಎಸ್ ಮತ್ತು ಶಿವಸೇನೆ ಮುಖಂಡರನ್ನು ಬಂಧಿಸುವಂತೆ ಒತ್ತಾಯಿಸಿದರು
ತುಮಕೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂ.ಇ.ಎಸ್ ಮತ್ತು ಶಿವಸೇನೆಯ ಪುಂಡರು ನಾಡ ಧ್ವಜ ಕನ್ನಡ ಬಾವುಟವನ್ನು ಸುಟ್ಟಿರುವ ಕುಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಮಾವೇಶಗೊಂಡ ಕರುನಾಡ ವಿಜಯಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಸಿ.ಪಿ.ಸುಧೀರ್, ನಮ್ಮ ಹೆಮ್ಮೆಯ ಸ್ವಾಭಿಮಾನದ ಸಂಕೇತವಾದ ಕನ್ನಡ ಧ್ವಜವನ್ನು ್ಲ ಎಂ.ಇ.ಎಸ್ ಮತ್ತು ಶಿವಸೇನೆಯ ಪುಂಡರು ಸುಡುವ ಮೂಲಕ ಕೋಟ್ಯಾಂತರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯಾದ್ಯಂತ ಕರುನಾಡ ವಿಜಯಸೇನೆ ರಾಜ್ಯಾಧ್ಯಕ್ಷರಾದ ಹ.ನೀ.ದೀಪಕ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಇಂದು ತುಮಕೂರಿನಲ್ಲೂ ಸಹ ಜಿಲ್ಲಾಧಿಕಾರಿಗಳ ಮೂಲಕ ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆಯನ್ನು ಖಂಡಿಸಿ, ನಾಡಧ್ವಜ ಸುಟ್ಟ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.
ಈ ಕೃತ್ಯವನ್ನು ಮಾಡಿರುವವರು ಯಾರೇ ಆಗಿದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಬೇಕು, ಕೃತ್ಯವನ್ನು ಮಾಡಿರುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ತಾವು ಸರ್ಕಾರದ ಗಮನಕ್ಕೆ ತಂದು ಅವರಿಗೆ ಸೂಕ್ತ ಶಿಕ್ಷೆಯನ್ನು ಕೂಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಶಾಸಕರು, ಸಚಿವರು, ಜನಪ್ರತಿನಿಧಿಗಳು ಈ ಕೃತ್ಯವನ್ನು ಗಂಭೀರವಾಗಿ ಪರಿಗಣ ಸಿ ನಾಡಧ್ವಜವನ್ನು ಸುಟ್ಟ ಪುಂಡರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾ ಗೌರವಾಧ್ಯಕ್ಷರಾದ ಬಿ.ಬಿ.ಮಹದೇವಯ್ಯ ಮಾತನಾಡಿ, ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ನಮ್ಮದೇ ನೆಲದಲ್ಲಿ ಕನ್ನಡ ಜನರನ್ನು ಅನಗತ್ಯವಾಗಿ ತೊಂದರೆಗೊಳಗಾಗಿಸುತ್ತಿದ್ದಾರೆ. ಇವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರಕ್ಕೆ ಈ ವಿಷಯ ಗೊತ್ತಿದ್ದರೂ ಇನ್ನೂ ಆರೋಪಿಗಳನ್ನು ಬಂಧಿಸುವಲ್ಲಿ ಕ್ರಮ ಕೈಗೊಂಡಿಲ್ಲ, ಕೂಡಲೇ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆ ವಿಧಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧವೂ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಕರುನಾಡ ವಿಜಯಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಅನಿಲ್ ನಾಯಕ್, ನಗರಾಧ್ಯಕ್ಷ ಪಿ.ಎಸ್. ಪುರುಷೋತ್ತಮ್, ಜಿಲ್ಲಾ ಸಂಚಾಲಕ ಎ.ಜಿ.ಹರೀಶ್, ಸಂಘಟನಾ ಕಾರ್ಯದರ್ಶಿ ಕೆ.ಎನ್. ನಾಗರಾಜು, ಎಸ್.ಸುಧಾಕರ್ ರಾವ್, ಜಿ.ಜಗದೀಶ್, ಶಿವು, ಲಕ್ಷ್ಮೀಪತಿ ಸೇರಿದಂತೆ ಹಲವರು ಭಾಗವಹಿಸಿದ್ದರು.