breaking news

ಚಿಕ್ಕನಾಯಕನಹಳ್ಳಿ, ತಿಪಟೂರು ಮತ್ತು ತುರುವೇಕೆರೆ ತಾಲ್ಲೂಕುಗಳ ಹಲವು ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಚಿಕ್ಕನಾಯಕನಹಳ್ಳಿ, ತಿಪಟೂರು ಮತ್ತು ತುರುವೇಕೆರೆ ತಾಲ್ಲೂಕುಗಳ ಹಲವು ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ, ಹೊಸದಾಗಿ ಕೊರೆದಿರುವ ಕೊಳವೆಬಾವಿಗಳು ಹಾಗೂ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಹೋಬಳಿಯ ಮುದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ಕಲ್ಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಖಾಸಗಿ ಕೊಳವೆಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಗ್ರಾಮದಲ್ಲಿ ಹೊಸ ಕೊಳವೆಬಾವಿ ಕೊರೆಸಲು ಕಂಟಿಂಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಅನುಮೋದನೆ ದೊರೆತಿದ್ದು, ತಕ್ಷಣ ಕಾಮಗಾರಿ ಆರಂಭಿಸಿ ಶೀಘ್ರದಲ್ಲಿ ಗ್ರಾಮಸ್ಥರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ವಚ್ಛತೆ, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ, ಹೆಚ್ಚುವರಿ ಪೌಷ್ಟಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು. KMERC-CEPMIZ ಯೋಜನೆಯಡಿ ವಿದ್ಯಾರ್ಥಿಗಳಿಗೆ ನಿಗದಿತ ಪ್ರಮಾಣದಲ್ಲಿ ಹೆಚ್ಚುವರಿ ಪೌಷ್ಠಿಕ ಆಹಾರ ಹಾಗೂ ಹಣ್ಣು ವಿತರಣೆ ಸಮರ್ಪಕವಾಗಿ ನಡೆಯುವಂತೆ ಹಾಗೂ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.

ನಂತರ ಲಕ್ಕೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಹೊಸದಾಗಿ ಕಂಟಿಂಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಕೊರೆದಿರುವ ಕೊಳವೆಬಾವಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ನೀರಿನ ಲಭ್ಯತೆ ಮತ್ತು ಗ್ರಾಮಸ್ಥರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಬಳಿಕ ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಕೇನಹಳ್ಳಿ ಹಾಗೂ ಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ನಾಕೇನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಕೊರೆದಿರುವ ಕೊಳವೆಬಾವಿಗೆ ಮೋಟಾರ್ ಹಾಗೂ ಪೈಪ್‌ಲೈನ್ ಅಳವಡಿಕೆ ಬಾಕಿಯಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಹಿಂದೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಗ್ರಾಮಸ್ಥರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.

ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ತಾಳಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಕಲ್ಕೆರೆ ಮತ್ತು ಡೋಂಕಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಗ್ರಾಮಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಡಿ.ಕಲ್ಕೆರೆ ಗ್ರಾಮದ ಹೊಸ ಬಡಾವಣೆಯಲ್ಲಿ ಪ್ರಸ್ತುತ ಖಾಸಗಿ ಕೊಳವೆಬಾವಿಯಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಹೊಸ ಕೊಳವೆಬಾವಿ ಕೊರೆಸಲು ಕಂಟಿಂಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಅನುಮೋದನೆ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಹೊಸ ಕೊಳವೆಬಾವಿ ಕೊರೆದು ನೀರಿನ ಗುಣಮಟ್ಟ ಪರಿಶೀಲಿಸಿ, ತಕ್ಷಣ ವಿದ್ಯುತ್ ಸಂಪರ್ಕ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಡೋಂಕಿಹಳ್ಳಿ ಗ್ರಾಮದಲ್ಲಿ ಈಗಾಗಲೇ ಕೊಳವೆಬಾವಿ ಕೊರೆಸಲಾಗಿದ್ದು ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ, ಕಾಮಗಾರಿಯನ್ನು ಶೀಘ್ರು ಪೂರ್ಣಗೊಳಿಸಿ ನೀರು ಪೂರೈಕೆಗೆ ಕ್ರಮವಹಿಸುವಂತೆ ಸೂಚಿಸಿದರು.

ಪ್ರವಾಸದ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ತಿಪಟೂರು ಉಪವಿಭಾಗ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

DC Conducts Spot Inspection in Chikkanayakanahalli, Tiptur and Turuvekere, Directs Officials to Ensure Drinking Water Supply

Share this post

About the author

Leave a Reply

Your email address will not be published. Required fields are marked *