ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ತುಮಕೂರು: ಅಲ್ಪಸಂಖ್ಯಾತ ಇಲಾಖಾ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಇಲಾಖಾ ವ್ಯಾಪ್ತಿಗೆ ಒಳಪಡುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳಿಸಿ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಮೂಲಭೂತ ಸೌಲಭ್ಯಗಳನ್ನೊಳಗೊಂಡ ತರಬೇತಿ ಕೇಂದ್ರಗಳನ್ನು ಆರಂಭಿಸಬೇಕು ಎಂದರಲ್ಲದೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣವಾಗಿ ಸದ್ಬಳಕೆ ಮಾಡಬೇಕು ಎಂದರು.
ಇಲಾಖಾ ವ್ಯಾಪ್ತಿಯ ಜಿಲ್ಲೆಯಲ್ಲಿನ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಉರ್ದು ಶಿಕ್ಷಕರನ್ನು ಹಾಗೂ ಕನ್ನಡ ಶಿಕ್ಷಕರ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರದ ಕಟ್ಟಡಗಳನ್ನು ಶೀಘ್ರ ನವೀಕರಣಗೊಳಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಅಂಗನವಾಡಿ ಕಟ್ಟಡಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಸೂಚಿಸಿದರು.
ರಾಜ್ಯ ಅಲ್ಪಸಂಖ್ಯಾತ ಆಯೋಗದ ಕಾರ್ಯದರ್ಶಿ ಮೊಹಮ್ಮದ್ ನಜೀರ್ ಮಾತನಾಡಿ, ಮದರಸಾ ವಸತಿ ಶಾಲೆಗಳನ್ನು ಉನ್ನತೀಕರಣಗೊಳಿಸುವುದರ ಜೊತೆಗೆ ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನಿಗಧಿತ ಸಮಯದೊಳಗೆ ವಿದ್ಯಾರ್ಥಿವೇತನ ದೊರೆಯುವಂತೆ ಕ್ರಮವಹಿಸಬೇಕು. ಅಲ್ಲದೆ, ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಖದೀರ್ ಅಹಮದ್ ಮಾತನಾಡಿ, ಅಲ್ಪಸಂಖ್ಯಾತ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಶಬ್ಬೀರ್ ಅಹಮದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.