ತುಮಕೂರು: ಕುಣಿಗಲ್ ತಾಲೂಕು ಯಡಿಯೂರಿನ ಸಿದ್ದಲಿಂಗೇಶ್ವರ ದೇವಸ್ಥಾನ ಸಮೀಪ ರಸ್ತೆ ಪಕ್ಕದಲ್ಲಿ ಬ್ಯಾಗ್ನೊಳಗೆ ಐದು ದಿನದ ನವಜಾತ ಶಿಶು ಪತ್ತೆಯಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಬ್ಯಾಗ್ನೊಳಗಿಂದ ಮಗು ಅಳುವ ಶಬ್ದ ಕೇಳಿ ಬೆಚ್ಚಿಬಿದ್ದು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಮಾಹಿತಿ ಪಡೆದ ಅಮರತೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ರಕ್ಷಿಸಿದರು.ಪೊಲೀಸರು ಮಗುವನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು.

ನಂತರ ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾ ಆಸ್ಪತ್ರೆಯ ಎಸ್ಎನ್ಸಿಯು ವಾರ್ಡ್ನಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಅಮರತೂರು ಪೊಲೀಸ್ ಠಾಣೆಯ ಪಿಎಸ್ಐ ಶಮಂತ್ ಗೌಡ ಹಾಗೂ ಅವರ ತಂಡ ತ್ವರಿತ ಕ್ರಮ ಕೈಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
