ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಪ್ರಚಾರ ರಂಗೇರುತ್ತಿದೆ.
ರಾಜ್ಯದ ಪ್ರಮುಖ ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ತುಮಕೂರಿನ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಕೂಡ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.
ನಗರದ ವಾರ್ಡ್ ನಂಬರ್ 14ರಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಎನ್. ಚಂದ್ರಪ್ಪ, ಲೇಔಟ್ ಕೃಷ್ಣಪ್ಪ, ಮೃಣಾಲ್ ಹೆಬ್ಬಾಳ್ಕರ್, ಲಕ್ಷ್ಮಣ್ ಚೇರ್ಮನ್ ಹಾಗೂ ಇಕ್ಬಾಲ್ ಅಹಮದ್ ಅವರ ನೇತೃತ್ವದಲ್ಲಿ ಮನೆಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.
ಈ ವೇಳೆ ಮತದಾರರೊಂದಿಗೆ ಮಾತುಕತೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.ಇದೇ ವೇಳೆ ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದರು.
ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಬಡವರ ಪರವಾಗಿ ಹಾಗೂ ನ್ಯಾಯದ ಪರವಾಗಿ ಸದಾ ನಿಂತಿದೆ ಎಂದು ಹೇಳಿದರು.
ತುಮಕೂರಿನ ಕಾಂಗ್ರೆಸ್ ಮುಖಂಡ ಹಾಗೂ 14ನೇ ವಾರ್ಡ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇಕ್ಬಾಲ್ ಅಹಮದ್ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್, ಶಾಸಕ ರಿಜ್ವಾನ್ ಹರ್ಷತ್, ಎಂಎಲ್ಸಿ ಬಲ್ಫಿಸ್ ಬಾನು, 14ನೇ ವಾರ್ಡ್ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಚಮನ್ ಸಾಬ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

