ತುಮಕೂರು: ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವ ತೊಂದರೆಯೂ ಆಗದೆ ನೇರವಾಗಿ ಅವರ ಖಾತೆಗೆ ಹಣ ಜಮೆಯಾಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಫಲಾನುಭವಿಗಳ ಬ್ಯಾಂಕ್ ಖಾತೆಗಳು ಆಧಾರ್ ಜೋಡಣೆಗೆ
ಸಂಬಂಧಿಸಿದ ದೂರುಗಳು ಬರುತ್ತಿದ್ದು, ಶೀಘ್ರವಾಗಿ ಇವುಗಳನ್ನು ಪರಿಹಾರ ಮಾಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಗೌಡ ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನಾ
ಸಭೆಯಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ. ಕೆಲವರು ಮಾತ್ರ ಗೃಹ ಲಕ್ಷ್ಮಿ ಹಣ ಪಾವತಿಯಾಗಿಲ್ಲ ಎಂದು ದೂರು ನೀಡುತ್ತಿದ್ದಾರೆ. ಯಾವ ಕಾರಣಕ್ಕೆ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿಲ್ಲ ಎಂಬುದರ ಬಗ್ಗೆ ಶೀಘ್ರ ಮಾಹಿತಿ ಪಡೆದು ಪರಿಹಾರ ನೀಡುವಂತೆ ನಿರ್ದೇಶಿಸಿದರು.


ಜಿಲ್ಲೆಯಲ್ಲಿ ಈವರೆಗೆ ಗೃಹಲಕ್ಷ್ಮಿಯೋಜನೆಗೆ 1807 ಕೋಟಿ ರೂ., ಗೃಹ ಜ್ಯೋತಿ ಯೋಜನೆಗೆ 314 ಕೋಟಿ ರೂ., ಅನ್ನಭಾಗ್ಯ
ಯೋಜನೆಗೆ 474 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಪ್ರಸ್ತುತ 2024ನೇ ಸೆಪ್ಟಂಬರ್ ಮಾಹೆಗೆ ಅನುದಾನ ಬಿಡುಗಡೆಯಾಗಿದ್ದು, ನೇರ ನಗದು ಮೂಲಕ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ನವೆಂಬರ್ ಮತ್ತು ಡಿಸೆಂಬರ್ ಮಾಹೆಯ ಅನುದಾನ ಬಿಡುಗಡೆಯಾಗಬೇಕಿದೆ ಎಂದು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ 6410 ಅಭ್ಯರ್ಥಿಗಳು ನೋಂದಣಿಯಾಗಿದ್ದು, ನಿರುದ್ಯೋಗ ಭತ್ಯೆ ಪಡೆಯಲು ಅರ್ಹರಾಗಿದ್ದಾರೆ. ಶಕ್ತಿ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 3.09 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದ್ದು, ಇದರಲ್ಲಿ 1.98 ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.



ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ
ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ ಉಪ
ಕಾರ್ಯದರ್ಶಿ(ಆಡಳಿತ), ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.